ಲಿಂಗಸುಗೂರು: ತಾಲೂಕಿನ ಸುಣಕಲ್ ಗ್ರಾಮದಲ್ಲಿರುವ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಒಡೆತನದ ಆರ್.ಬಿ. ಶುಗರ್ಸ್ ಸಕ್ಕರೆ ಕಾರ್ಖಾನೆಯಲ್ಲಿ ನವೆಂಬರ್ 20ರಿಂದ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ ಎಂದು ಕಾರ್ಖಾನೆಯ ತಾಂತ್ರಿಕ ಉಪಾಧ್ಯಕ್ಷ ಎಸ್.ಆರ್. ಕುಂದರಗಿ ತಿಳಿಸಿದರು.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ರೈತರಿಂದ ಕಬ್ಬು ಸಂಗ್ರಹಣೆ ಹಾಗೂ ಕಾರ್ಖಾನೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ರಾಯಚೂರು, ಯಾದಗಿರಿ, ಬಾಗಲಕೋಟೆ ಸೇರಿದಂತೆ ನಾಲ್ಕು ಜಿಲ್ಲೆಗಳ ಸುಮಾರು 40 ಸಾವಿರ ಕಬ್ಬು ಬೆಳೆಗಾರರು ಕಾರ್ಖಾನೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಾಯಿತ ರೈತರಿಗೆ ಉಚಿತವಾಗಿ ಕಬ್ಬಿನ ಬೀಜ ವಿತರಿಸಲಾಗಿದ್ದು, ರೈತರು ಕಬ್ಬು ಬೆಳೆದು ಕಾರ್ಖಾನೆಗೆ ಪೂರೈಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಆರ್.ಬಿ. ಶುಗರ್ಸ್ ಕಾರ್ಖಾನೆಯು ಪ್ರತಿದಿನ 5 ಸಾವಿರ ಟನ್ ಕಬ್ಬು ನುರಿಸುವ ಸಾಮರ್ಥ್ಯ ಹೊಂದಿದೆ. ಕಬ್ಬು ನುರಿಸುವ ಕಾರ್ಯವನ್ನು ಸುಗಮವಾಗಿ ನಡೆಸಲು ಅಗತ್ಯ ತಾಂತ್ರಿಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರೈತರು ಬೆಳೆದ ಕಬ್ಬನ್ನು ಕಾರ್ಖಾನೆಗೆ ಪೂರೈಸುವುದರಿಂದ ಈ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಹಾಗೂ ತಾಲೂಕಿನ ಸುಮಾರು 40ರಿಂದ 50 ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ. ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿದ ನಂತರ ಸುಮಾರು ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿರೀಕ್ಷೆಯಿದೆ. ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ವೇತನ ನಿಗದಿಪಡಿಸಲಾಗುವುದು. ನೇಮಕಾತಿಯಲ್ಲಿ ಸಾಧ್ಯವಾದಷ್ಟು ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಖಾನೆಯ ಅಭಿವೃದ್ಧಿ ಹಾಗೂ ಸುಗಮ ಕಾರ್ಯನಿರ್ವಹಣೆಗೆ ರೈತರ ಸಹಕಾರ ಅತ್ಯಂತ ಅಗತ್ಯವಾಗಿದೆ. ಕಬ್ಬು ಬೆಳೆಗಾರರು ಕಾರ್ಖಾನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಾವು ಬೆಳೆದ ಕಬ್ಬನ್ನು ಪೂರೈಸುವ ಮೂಲಕ ಈ ಭಾಗದ ಕೃಷಿ ಆಧಾರಿತ ಕೈಗಾರಿಕೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಎಸ್.ಆರ್. ಕುಂದರಗಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಬ್ಬು ಅಭಿವೃದ್ಧಿ ಮತ್ತು ಸಂಗ್ರಹಣೆ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಿ.ಬಿ. ಪಾಟೀಲ್ ಹಾಗೂ ಸಹಸಂಚಾಲಕ ಅಮಿತ್ ಉಪಸ್ಥಿತರಿದ್ದರು.



