ರಾಯಚೂರು ನ. 07 (ಕರ್ನಾಟಕ ವಾರ್ತೆ): ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ವ್ಯವಸ್ಥೆಯನ್ನು ರೂಪಿಸಲಾಗಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.
ನ. 07ರ ಶನಿವಾರ ದಂದು ಜಿಲ್ಲೆಯ ಅರಕೇರಾ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಅರಕೇರಾ ಹಾಗೂ ವಿವಿಧ ಇಲಾಖೆಯಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸಾರ್ವಜನಿಕರು ಜಿಲ್ಲಾ ಮಟ್ಟದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ಅಧಿಕಾರಿಗಳೇ ನೇರವಾಗಿ ಜನರ ಬಳಿಗೆ ತೆರಳಿ ಅವರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಹಾಗೂ ಸಕಾಲದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ರೆವೆನ್ಯೂ ದಾಖಲೆಗಳಿಗೆ ಸಂಬAಧಿಸಿದAತೆ ದೇವದುರ್ಗ ಮತ್ತು ಅರಕೆರೆ ತಾಲೂಕಿಗೆ ಸಾರ್ವಜನಿಕರು ಅಲೆಯುತ್ತಿರುವ ಪರಿಸ್ಥಿತಿ ಹಾಗೂ ಈ ವರ್ಷ ತೀವ್ರ ಬರಗಾಲದ ಸಮಸ್ಯೆ ಇರುವುದರಿಂದ, ರೈತರು ಬಿತ್ತನೆ ಮಾಡಿರುವ ಬೆಳೆಗಳನ್ನು ಕಾಪಾಡಲು ಮತ್ತು ಎನ್ಆರ್ಬಿಸಿ ಮೂಲಕ ನೀರು ಹರಿಸಲು ಹಲವು ಬಾರಿ ಮನವಿ ಮಾಡಲಾಗಿದ್ದು, ರೈತರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ದೇವದುರ್ಗ ಮತ್ತು ಅರಕೇರಾ ತಾಲೂಕುಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹಾಗೂ ಚಿಕ್ಕ ವಯಸ್ಸಿನಲ್ಲಿ ಗರ್ಭಿಣಿಯರಾಗುವ ಘಟನೆಗಳು ಮತ್ತು ಪೋಕ್ಸೋ ಪ್ರಕರಣಗಳು ಹೆಚ್ಚಾಗಿರುವುದು ಗಮನಕ್ಕೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗರ್ಭಿಣಿಯರು, ಬಾಣಂತಿಯರು ಹಾಗೂ ಹೆಣ್ಣು ಮಕ್ಕಳಿಗಾಗಿ ಇರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಜಾಸೇವಾ ಕಾರ್ಯಕ್ರಮದಲ್ಲಿ ವಿವಿಧ ಸ್ಟಾಲ್ಗಳನ್ನು ತೆರೆಯಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್ ಪ್ರವೇಶ ಹಾಗೂ ಇತರೆ ಸೌಲಭ್ಯಗಳು, ಆಹಾರ ಇಲಾಖೆಯಿಂದ ಪಡಿತರ ಚೀಟಿ ವಿತರಣೆ ಮತ್ತು ಅದನ್ನು ನಿರಂತರಗೊಳಿಸುವ ಕುರಿತು ಕ್ರಮ ವಹಿಸಲಾಗುತ್ತಿದೆ. ಈಗಾಗಲೇ ಬರಗಾಲ ಘೋಷಣೆಯಾಗಿರುವುದರಿಂದ ವಿ.ಬಿ.ಜಿ ರಾಮ್ಜಿ ಯೋಜನೆಯಡಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ 125 ದಿನಗಳ ಕೆಲಸವನ್ನು ಒದಗಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಕ್ಷನ್ ಪ್ಲಾನ್ ಮಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು, ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಿದ್ದರೂ ಅದಕ್ಕಾಗಿ ಇಲ್ಲಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದರು.
ಪ್ರಾಸ್ತಾವಿಕವಾಗಿ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಮಾತನಾಡಿ, ಸರ್ಕಾರದ ಸೇವೆಗಳನ್ನು ಸಾರ್ವಜನಿಕರ ಬಳಿಗೆ ತಲುಪಿಸುವ ಸದುದ್ದೇಶದಿಂದ ಪ್ರಜಾಸೇವೆಯ ಆಂದೋಲನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವುದಾಗಿದೆ. ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮವು ಜರುಗುತ್ತಿದ್ದು. ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳ ಮಾಹಿತಿ ಒಂದೇ ಕಡೆ ಲಭ್ಯವಿರಲಿದೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಅಥವಾ ಗ್ರಾಮದ ಕುಂದುಕೊರತೆಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಶರಣಬಸವ ಅವರು ಮಾತನಾಡಿ, ಜನಸೇವೆ ಮತ್ತು ಸೌಲಭ್ಯಗಳ ನೇರ ವಿತರಣೆಗೆ ಒತ್ತು ನೀಡಲಾಗುತ್ತಿದ್ದು, ಸರ್ಕಾರದಿಂದ ಸಿಗತಕ್ಕಂತಹ ಎಲ್ಲಾ ಸೌಲಭ್ಯಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಜನಸಾಮಾನ್ಯರಿಗೆ ತಲುಪಬೇಕು ಎಂಬ ಮಹತ್ವದ ಉದ್ದೇಶದಿಂದ 'ಜನಸ್ನೇಹಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಕಳೆದ ಮೂರು ತಿಂಗಳಿAದ ಈ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಮೊದಲ ಹಂತದಲ್ಲಿ ಮಾನ್ವಿ ಹಾಗೂ ಎರಡನೇ ಹಂತದಲ್ಲಿ ಲಿಂಗಸೂಗೂರಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿದೆ. ಇಂದು ಮೂರನೇ ಕಾರ್ಯಕ್ರಮವು ಅರಕೇರಿಯಲ್ಲಿ ಜರುಗುತ್ತಿದೆ ಎಂದರು.
ಮಸರಕಲ್ ಗ್ರಾಮದಲ್ಲಿ ಶಕ್ತಿ ಕೇಂದ್ರದಲ್ಲಿ ಪೌಷ್ಟಿಕ ಆಹಾರದ ಪೌಡರ್ ತಯಾರಿಸಲಾಗುತ್ತಿದ್ದು, ಇದನ್ನು ದೇವದುರ್ಗ ತಾಲ್ಲೂಕಿನ ವಿವಿಧ ಕುಟುಂಬಗಳಿಗೆ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕಳೆದ ಎರಡು ತಿಂಗಳಿAದ ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.
ಈ ವೇಳೆ ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹಮದ್ ಅವರು ಮಾತನಾಡಿ, ಜನರ ಯಾವುದೇ ಸಮಸ್ಯೆಗಳು ಅಥವಾ ಕುಂದುಕೊರತೆಗಳಿದ್ದರೂ ಅವುಗಳನ್ನು ಪರಿಹರಿಸಲು ಸರಕಾರವೇ ಜನರ ಮನೆಬಾಗಿಲಿಗೆ ಬಂದಿದೆ. ಪ್ರಜಾಸೇವಾ ಆಂದೋಲನದ ಮೂಲಕ ಕೌಂಟರ್ಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಇತರ ಸಮಸ್ಯೆಗಳಿದ್ದರೆ ಪ್ರಜಾಸೇವಾ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ ನಿಯಮಾನುಸಾರ ಪರಿಶೀಲಿಸಿ ಪರಿಹಾರ ನೀಡಲಾಗುತ್ತದೆ ಎಂದರು. ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದೆ. ಇ-ಕೆವೈಸಿ ಕಡ್ಡಾಯವಾಗಿದ್ದು, ಫಲಾನುಭವಿಗಳು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದರು.
ಬಾಲ್ಯ ವಿವಾಹ ನಿಷೇಧ ಪ್ರಜ್ಞೆ ವಿಧಿ: ಬಾಲ್ಯ ವಿವಾಹ ಮುಕ್ತ ಭಾರತ 100 ದಿನಗಳ ಅಭಿಯಾನ ಅಂಗವಾಗಿ ದೇವದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ಅವರಿಂದ ಬಾಲ್ಯ ವಿವಾಹ ನಿಷೇಧ ಪ್ರಜ್ಞೆ ವಿಧಿಯನ್ನು ಇದೇ ಸಂದರ್ಭದಲ್ಲಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಇದೆ ಸಂದರ್ಭದಲ್ಲಿ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಅರಕೇರಾದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಪ್ರಜಾಸೇವಾ ಆಂದೋಲನ ಸಭೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ, ಎನ್.ಆರ್.ಎಲ್.ಎಂ. ಕಂದಾಯ ಇಲಾಖೆ ಹಾಗೂ ವಿವಿಧ ಸ್ವಸಹಾಯ ಸಂಘದ ವಿವಿಧ ಮಳಿಗೆಗಳಿಗೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಅರಣ್ಯ ಅಧಿಕಾರಿ ಸುರೇಂದ್ರ ಬಾಬು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಎಮ್.ಎನ್., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸರಸ್ವತಿ, ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ್, ಅರಕೇರಾ ತಹಶಿಲ್ದಾರ್ ಅಮರೇಶ್ ಬಿರಾದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ವಿ.ವಾಲ್ಮೀಕಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



