ರಾಯಚೂರು: ಗಾಂಜಾ, ತಂಬಾಕು, ಮದ್ಯಪಾನ ಸೇರಿದಂತೆ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹದಗೆಡುವುದಲ್ಲದೆ, ಕುಟುಂಬದ ನೆಮ್ಮದಿ ಮತ್ತು ಆರ್ಥಿಕ ಸ್ಥಿರತೆಯೂ ಹಾಳಾಗುತ್ತದೆ. ಯುವಜನತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಕರೆ ನೀಡಿದರು.
ನಗರದ ಶೆಟ್ಟಿಬಾವಿ ಚೌಕ್ನಿಂದ ಹರಿಜನವಾಡದ ನಾಗರಕಟ್ಟೆ ದೇವಸ್ಥಾನದವರೆಗೆ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ‘ನಶಾಮುಕ್ತ ರಾಯಚೂರು’ ಹಾಗೂ ‘ತಂಬಾಕು ಮುಕ್ತ ಯುವ ಅಭಿಯಾನ 4.0’ ಅಂಗವಾಗಿ ಜಾಗೃತಿ ನಡಿಗೆ ಮತ್ತು ಬೀದಿನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಬಳಕೆ ಆರಂಭದಲ್ಲಿ ಹವ್ಯಾಸವಾಗಿ ಕಾಣಿಸಿಕೊಂಡರೂ ಕ್ರಮೇಣ ವ್ಯಸನವಾಗಿ ಮಾರ್ಪಡುತ್ತದೆ. ಗಾಂಜಾ, ಅಫೀಮು, ಚರಸ್, ಹೆರಾಯಿನ್, ಸಿಗರೇಟ್, ಬೀಡಿ, ಹುಕ್ಕಾ ಹಾಗೂ ಮದ್ಯಪಾನದಂತಹ ದುಶ್ಚಟಗಳು ಮನುಷ್ಯನ ಆರೋಗ್ಯ, ವ್ಯಕ್ತಿತ್ವ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಅದರಲ್ಲೂ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ರಾಸಾಯನಿಕ ಪುಡಿಗಳನ್ನು ಬಳಸಿ ತಯಾರಿಸಲಾಗುತ್ತಿದೆ ಎನ್ನಲಾದ ನಕಲಿ ಸೇಂಧಿಯಂತಹ ಅಮಲು ಪದಾರ್ಥಗಳ ಸೇವನೆ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ ಎಂದು ಎಚ್ಚರಿಸಿದರು.
ಮಾದಕ ವಸ್ತುಗಳ ವ್ಯಸನದಿಂದ ವ್ಯಕ್ತಿಯ ವರ್ತನೆಯಲ್ಲಿ ಬದಲಾವಣೆ ಉಂಟಾಗಿ ಕೌಟುಂಬಿಕ ಕಲಹ, ಹಿಂಸಾಚಾರ, ಆರ್ಥಿಕ ಸಂಕಷ್ಟ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಇಂತಹ ದುಶ್ಚಟಗಳಿಗೆ ಯುವಜನತೆ ಬಲಿಯಾಗದಂತೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ದೇಶಾದ್ಯಂತ 2020ರ ಆಗಸ್ಟ್ 15ರಂದು ಆರಂಭವಾದ ನಶಾಮುಕ್ತ ಭಾರತ ಅಭಿಯಾನದ ಆಶಯದಂತೆ ರಾಯಚೂರು ಜಿಲ್ಲೆಯಲ್ಲಿಯೂ ಮಾದಕ ವಸ್ತುಗಳ ವಿರುದ್ಧ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನತೆ ಹಾಗೂ ಕೊಳಗೇರಿ ಪ್ರದೇಶಗಳ ನಿವಾಸಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಮಾತನಾಡಿ, ತಂಬಾಕು, ಮದ್ಯಪಾನ ಹಾಗೂ ಇತರ ಮಾದಕ ವಸ್ತುಗಳ ನಿರಂತರ ಸೇವನೆಯಿಂದ ಕ್ಯಾನ್ಸರ್, ವಿಶೇಷವಾಗಿ ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್, ಯಕೃತ್ತಿನ ಸಿರೋಸಿಸ್, ಹೃದ್ರೋಗ, ಪಾರ್ಶ್ವವಾಯು ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಖಿನ್ನತೆ, ಮಾನಸಿಕ ಅಸ್ವಸ್ಥತೆ ಹಾಗೂ ಆತ್ಮಹತ್ಯೆಯ ಅಪಾಯದಂತಹ ಸಮಸ್ಯೆಗಳಿಗೂ ವ್ಯಸನ ಕಾರಣವಾಗಬಹುದು ಎಂದು ವಿವರಿಸಿದರು.
ತಂಬಾಕು ಮುಕ್ತ ಯುವ ಅಭಿಯಾನ 4.0ರ ಅಂಗವಾಗಿ ಡಿಸೆಂಬರ್ 26ರವರೆಗೆ ಜಿಲ್ಲೆಯಾದ್ಯಂತ ವಿಶೇಷ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ)-2003ರ ಪರಿಣಾಮಕಾರಿ ಅನುಷ್ಠಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮಾದಕ ವಸ್ತುಗಳ ವ್ಯಸನದಿಂದ ಹೊರಬರಲು ಬಯಸುವವರಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯ ಬಿ ಬ್ಲಾಕ್ನ ಕೊಠಡಿ ಸಂಖ್ಯೆ 27ರಲ್ಲಿ ಸಮಾಲೋಚನಾ ಸೌಲಭ್ಯ ಕಲ್ಪಿಸಲಾಗಿದೆ. ವ್ಯಸನಮುಕ್ತಿಗಾಗಿ ಮಾರ್ಗದರ್ಶನ ಮತ್ತು ಮಾನಸಿಕ ಆರೋಗ್ಯ ಸಂಬಂಧಿತ ನೆರವು ಪಡೆಯಲು ಸಾರ್ವಜನಿಕರು ಈ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದು. ಅಲ್ಲದೆ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆ 14416ಕ್ಕೆ ಕರೆ ಮಾಡಿ ಸಲಹೆ ಮತ್ತು ನೆರವು ಪಡೆಯಬಹುದು ಎಂದು ಮಾಹಿತಿ ನೀಡಿದರು.
ಜಾಗೃತಿ ನಡಿಗೆಯ ಅಂಗವಾಗಿ ಹರಿಜನವಾಡ ಪ್ರದೇಶದಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಬೀದಿನಾಟಕ ಪ್ರದರ್ಶಿಸಿದರು. ವ್ಯಸನಕ್ಕೆ ಒಳಗಾದ ವ್ಯಕ್ತಿ ಮತ್ತು ಆತನ ಕುಟುಂಬ ಎದುರಿಸುವ ಸಂಕಷ್ಟಗಳನ್ನು ನಾಟಕದ ಮೂಲಕ ಮನಮುಟ್ಟುವಂತೆ ಚಿತ್ರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಗಣೇಶ್ ಕೆ., ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಶಾಕೀರ್ ಮೋಯುನುದ್ದೀನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಕುಮಾರ್ ನಾರಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಯಶೋಧಾ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಅಮೃತ್ ಹುಕ್ಕೇರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ, ಮನೋರೋಗ ತಜ್ಞ ಡಾ. ಮನೋಹರ ಪತ್ತಾರ, ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಜಯಪಾಲರೆಡ್ಡಿ ಉಪಸ್ಥಿತರಿದ್ದರು.
ವೈದ್ಯಾಧಿಕಾರಿಗಳಾದ ಡಾ. ಸುನೀಲ್, ಡಾ. ಗುಂಡಮ್ಮ, ಡಾ. ಶ್ವೇತಾಂಬರಿ, ಡಾ. ಸುನೀತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಸೇರಿದಂತೆ ಮಹಾನಗರ ಪಾಲಿಕೆ, ಪೊಲೀಸ್ ಮತ್ತು ಆರೋಗ್ಯ ಇಲಾಖೆಗಳ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



