ದೇವದುರ್ಗ: ಹಾಲು, ಮೊಸರು ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ, ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಯಚೂರು–ದೇವದುರ್ಗ ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ (ನ.10) ಪ್ರತಿಭಟನೆ ನಡೆಸಲಾಯಿತು.

ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಮಹಿಬೂಬ್ ಬಬ್ಬು ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ರಾಜ್ಯ ಸರ್ಕಾರ ಒಂದು ಕಡೆ ಜನಸಾಮಾನ್ಯರ ಆರ್ಥಿಕ ನೆರವಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೆ, ಮತ್ತೊಂದೆಡೆ ಹಾಲು, ಮೊಸರು, ಅಕ್ಕಿ, ಅಡುಗೆ ಎಣ್ಣೆ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಬಸ್ ಪ್ರಯಾಣ ದರ ಹೆಚ್ಚಳದಿಂದ ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರು ಹಾಗೂ ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಕೇಂದ್ರ ಸರ್ಕಾರವೂ ಜನಸಾಮಾನ್ಯರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಮುಖಂಡರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ಅದರ ಪ್ರಯೋಜನ ಸಾಮಾನ್ಯ ಜನರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳಿಂದ ಕುಟುಂಬಗಳ ಮಾಸಿಕ ಖರ್ಚು ಹೆಚ್ಚಾಗುತ್ತಿದೆ ಎಂದು ಟೀಕಿಸಿದರು.

ಬೆಲೆ ಏರಿಕೆಯನ್ನು ನಿಯಂತ್ರಿಸುವುದು ಸರ್ಕಾರಗಳ ಪ್ರಮುಖ ಜವಾಬ್ದಾರಿಯಾಗಿದ್ದು, ಜನಸಾಮಾನ್ಯರ ಆರ್ಥಿಕ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಹಾಲಿನ ಬೆಲೆ ಏರಿಕೆಯನ್ನು ಹಿಂಪಡೆಯಬೇಕು. ಹೆಚ್ಚಿಸಿರುವ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವನ್ನು ಹಿಂದಿನ ಮಟ್ಟಕ್ಕೆ ಇಳಿಸಬೇಕು. ದಿನಸಿ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಮಾರುಕಟ್ಟೆಯಲ್ಲಿ ಕಾಳಸಂತೆ ವ್ಯಾಪಾರ ಹಾಗೂ ಕೃತಕ ಅಭಾವ ಸೃಷ್ಟಿಸಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಾಮಾನ್ಯ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಬೀಳುತ್ತಿರುವ ಆರ್ಥಿಕ ಹೊರೆಯನ್ನು ತಗ್ಗಿಸಲು ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ರಾಯಚೂರು ಜಿಲ್ಲಾಧ್ಯಕ್ಷ ಖಾದರ್ ಪಾಶ, ಜಿಲ್ಲಾ ಸಮಿತಿ ಸದಸ್ಯ ಬಬ್ಲೂ ಗುರುಗುಂಟಾ, ಯಾದಗಿರಿ ಜಿಲ್ಲಾಧ್ಯಕ್ಷ ಮೊಹಮ್ಮದ್ ಯೂನುಸ್, ದೇವದುರ್ಗ ಸಮಿತಿ ಸದಸ್ಯರಾದ ಅಬ್ದುಲ್ ಗಫೂರ್ ಹಾಗೂ ಮಹೇಶ್ ಮಾತನಾಡಿದರು.

ಜನಸಾಮಾನ್ಯರ ಹಿತದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬೆಲೆ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಮುಖಂಡರು ಎಚ್ಚರಿಸಿದರು.