ದೇವದುರ್ಗ: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಹೇಳಿಕೆಯನ್ನು ತಕ್ಷಣ ಹಿಂಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ದೇವದುರ್ಗ ತಾಲೂಕು ಜನತಾದಳ (ಜಾತ್ಯತೀತ) ಘಟಕದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಸಚಿವರ ಹೇಳಿಕೆಯನ್ನು ಖಂಡಿಸಿದರು.

ಪಟ್ಟಣದ ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಜಮಾಯಿಸಿದ ಜೆಡಿಎಸ್ ಕಾರ್ಯಕರ್ತರು, ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಕರೆಮ್ಮ ಜಿ. ನಾಯಕ್, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು 'ಹಳ್ಳಿ ಗುಗ್ಗು' ಎಂಬ ಪದ ಬಳಸಿರುವುದು ಅತ್ಯಂತ ಖಂಡನೀಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಪದಬಳಕೆ ಹಾಗೂ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಜನರು ಮತ್ತು ರೈತ ಸಮುದಾಯದ ಶ್ರಮದಿಂದಲೇ ರಾಜ್ಯ ಹಾಗೂ ದೇಶದ ಅಭಿವೃದ್ಧಿ ಸಾಧ್ಯವಾಗಿದೆ. ಅಂತಹ ಗ್ರಾಮೀಣ ಜನರನ್ನು ಕೀಳಾಗಿ ಕಾಣುವ ಮನೋಭಾವ ಸರಿಯಲ್ಲ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಬಳಸಿರುವ ಪದವು ಕೇವಲ ಒಬ್ಬ ರಾಜಕೀಯ ನಾಯಕನಿಗೆ ಮಾಡಿದ ಅವಮಾನವಲ್ಲ, ಗ್ರಾಮೀಣ ಜನತೆ ಹಾಗೂ ರೈತ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತರುವಂತಿದೆ ಎಂದು ಆಕ್ಷೇಪಿಸಿದರು.

ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ ಸೇರಿದಂತೆ ಹಲವು ರೈತಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಲಕ್ಷಾಂತರ ರೈತ ಕುಟುಂಬಗಳಿಗೆ ನೆರವಾಗಿದ್ದಾರೆ. ರೈತರ ಸಂಕಷ್ಟಗಳಿಗೆ ಸ್ಪಂದಿಸಿದ ನಾಯಕರ ಕುರಿತು ರಾಜಕೀಯ ಭಿನ್ನಾಭಿಪ್ರಾಯದ ನೆಪದಲ್ಲಿ ಅವಹೇಳನಕಾರಿ ಪದಗಳನ್ನು ಬಳಸುವುದು ಸರಿಯಾದ ನಡೆಯಲ್ಲ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಆದರೆ ರಾಜಕೀಯ ಟೀಕೆಗಳು ವೈಯಕ್ತಿಕ ನಿಂದನೆ ಹಾಗೂ ಅವಹೇಳನದ ಮಟ್ಟಕ್ಕೆ ಇಳಿಯಬಾರದು. ಸಾರ್ವಜನಿಕ ಜೀವನದಲ್ಲಿರುವ ಪ್ರತಿಯೊಬ್ಬರೂ ಪರಸ್ಪರ ಗೌರವ ಮತ್ತು ಸಂಯಮದಿಂದ ವರ್ತಿಸಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ್ ಅಭಿಪ್ರಾಯಪಟ್ಟರು.

ಪ್ರತಿಭಟನಾಕಾರರು ಸಲ್ಲಿಸಿದ ಮನವಿ ಪತ್ರದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ರೈತರು ಹಾಗೂ ಗ್ರಾಮೀಣ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ಜನಪ್ರತಿನಿಧಿಗಳ ಮಾತುಗಳು ಸಮಾಜಕ್ಕೆ ಮಾದರಿಯಾಗಬೇಕೇ ಹೊರತು ಜನರ ಭಾವನೆಗಳಿಗೆ ನೋವುಂಟು ಮಾಡುವಂತಿರಬಾರದು. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿ ಬಹಿರಂಗವಾಗಿ ಕ್ಷಮೆಯಾಚಿಸುವುದು ಅಗತ್ಯವಾಗಿದೆ ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದರು.

ಒಂದು ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ಷಮೆಯಾಚಿಸಲು ಮುಂದಾಗದಿದ್ದರೆ ದೇವದುರ್ಗ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿಯೂ ಪಕ್ಷದ ವತಿಯಿಂದ ಹಂತ ಹಂತವಾಗಿ ಪ್ರತಿಭಟನೆ ಮತ್ತು ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದೇವದುರ್ಗ ತಾಲೂಕು ಜೆಡಿಎಸ್ ಅಧ್ಯಕ್ಷ ಬಸನಗೌಡ ದೇಸಾಯಿ, ಅರಕೇರಾ ತಾಲೂಕು ಜೆಡಿಎಸ್ ಅಧ್ಯಕ್ಷ ಸಿದ್ದಣ್ಣ ದಂಡಂಬಳಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.