ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಕರ ರೀತಿಯಲ್ಲಿ ವರ್ತಿಸಿದ್ದಲ್ಲದೆ, ರೌಡಿಶೀಟರ್ ಹಾಗೂ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಯಚೂರು ಜಿಲ್ಲಾ ಹತ್ತಿ ಬೆಳೆಗಾರರ ರೈತರ ಹೋರಾಟ ಸಮಿತಿ ಅಧ್ಯಕ್ಷ ಪಿ.ಎಸ್. ಚಿನ್ನಯ್ಯ ನಾಯಕ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 6ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಎಸ್ಪಿ ಅವರಿಗೆ ಕಿರುಸನ್ಮಾನ ಮಾಡಲು ಮುಂದಾದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸನ್ಮಾನಿಸುವ ಉದ್ದೇಶದಿಂದ ಕಚೇರಿಗೆ ಭೇಟಿ ನೀಡಿದ್ದಾಗ ಯಾವುದೇ ಮುನ್ಸೂಚನೆ ಇಲ್ಲದೆ ಏಕವಚನದಲ್ಲಿ ಮಾತನಾಡಿ, 'ನೀವು ಜೋಳಿಗೆ ಸಂಘದವರು, ವಸೂಲಿಗಾರರು' ಎಂದು ಅವಮಾನಿಸಿದರು. ಅಲ್ಲದೆ, ತಮ್ಮ ವಿರುದ್ಧ ರೌಡಿಶೀಟರ್ ತೆರೆಯುವುದಾಗಿ ಹಾಗೂ ಭಾರತೀಯ ದಂಡ ಸಂಹಿತೆಯ 420ನೇ ಕಲಂ ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು ಎಂದು ದೂರಿದರು.

ಕಚೇರಿಯಲ್ಲಿದ್ದ ಸುಮಾರು ಒಂಬತ್ತು ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿಯೇ ತಮ್ಮೊಂದಿಗೆ ವಾಗ್ವಾದ ನಡೆಸಿ ಅವಮಾನಕರವಾಗಿ ವರ್ತಿಸಿದರು. ಬಳಿಕ ಸನ್ಮಾನ ಸ್ವೀಕರಿಸಿದರೂ ಅವರ ವರ್ತನೆಯಿಂದ ತೀವ್ರ ಮಾನಸಿಕ ನೋವು ಹಾಗೂ ಅವಮಾನ ಅನುಭವಿಸುವಂತಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಸುಮಾರು 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಹತ್ತಿ ಬೆಳೆಗಾರರು ಸೇರಿದಂತೆ ಕೃಷಿಕರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ರೈತಪರ ಸಂಘಟನೆಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದುವರೆಗೆ ತಮ್ಮ ಸಾರ್ವಜನಿಕ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದರು.

ರೈತರ ಸಮಸ್ಯೆಗಳನ್ನು ಸರ್ಕಾರ ಹಾಗೂ ಆಡಳಿತದ ಗಮನಕ್ಕೆ ತರುವ ಉದ್ದೇಶದಿಂದ ಹೋರಾಟ ನಡೆಸುತ್ತಿರುವ ಸಂಘಟನೆಯ ಪದಾಧಿಕಾರಿಯೊಂದಿಗೆ ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಈ ರೀತಿಯಾಗಿ ವರ್ತಿಸಿರುವುದು ಖಂಡನೀಯ. ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳಿಂದ ಇಂತಹ ವರ್ತನೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ರೈತರ ಹಕ್ಕುಗಳು ಹಾಗೂ ನ್ಯಾಯಯುತ ಬೇಡಿಕೆಗಳಿಗಾಗಿ ದಶಕಗಳಿಂದ ಹೋರಾಟ ನಡೆಸುತ್ತಿರುವ ತಮ್ಮನ್ನು ಅವಮಾನಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಕುರಿತು ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರ್ತನೆಯ ಕುರಿತು ತನಿಖೆ ನಡೆಸಿ, ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅವರನ್ನು ರಾಯಚೂರು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ತಮ್ಮ ದೂರಿನ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಚಿನ್ನಯ್ಯ ನಾಯಕ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕೆ.ವಿ. ಸತ್ಯನಾರಾಯಣ ಹಾಗೂ ಎಚ್.ಎನ್. ರಾವ್ ಉಪಸ್ಥಿತರಿದ್ದರು.