ಸಿಂಧನೂರು: ತಾಲೂಕಿನ ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿವಿಧ ಕಾಯಿಲೆಗಳ ತಪಾಸಣೆಗಾಗಿ 40ಕ್ಕೂ ಹೆಚ್ಚು ನುರಿತ ವೈದ್ಯರನ್ನೊಳಗೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ತುರುವಿಹಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಆರ್. ಬಸನಗೌಡ ತುರುವಿಹಾಳ ಮನವಿ ಮಾಡಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸುಗುಣ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ವಿವಿಧ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಆಗಮಿಸಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಬಡವರು, ಮಹಿಳೆಯರು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿದ ನಂತರ ವೈದ್ಯರಾದ ಡಾ. ನಾಗರಾಜ ಕಾಟ್ವಾ ಹಾಗೂ ಶ್ರೀರಾಮ ನಲ್ಲಾ ಅವರ ಸೇವೆಯಿಂದ ಪ್ರತಿದಿನ 300ಕ್ಕೂ ಹೆಚ್ಚು ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಇದರಿಂದ ತುರುವಿಹಾಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಾಗರಾಜ ಕಾಟ್ವಾ ಮಾತನಾಡಿ, ಶಿಬಿರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ಸಮಸ್ಯೆಗಳು, ಹೃದಯ ಸಂಬಂಧಿ ಕಾಯಿಲೆಗಳು, ಕಣ್ಣು, ಕಿವಿ, ಮೂಗು ಮತ್ತು ಗಂಟಲು ಸಮಸ್ಯೆಗಳಿಗೆ ತಪಾಸಣೆ ನಡೆಸಲಾಗುವುದು ಎಂದು ವಿವರಿಸಿದರು.
ಇದಲ್ಲದೆ ಮಧುಮೇಹ, ಅಧಿಕ ರಕ್ತದೊತ್ತಡ, ಕೀಲು ಮತ್ತು ಮೂಳೆ ಸಂಬಂಧಿ ಕಾಯಿಲೆಗಳು, ನರರೋಗ, ಮೂತ್ರರೋಗ, ದಂತ ಸಮಸ್ಯೆಗಳು, ಚರ್ಮರೋಗ, ಮಾನಸಿಕ ಆರೋಗ್ಯ ಸಮಸ್ಯೆಗಳು ಹಾಗೂ ಮಕ್ಕಳ ಕಾಯಿಲೆಗಳಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ತಪಾಸಣೆ ನಡೆಸಲಾಗುವುದು. ಆಯುಷ್ ವೈದ್ಯಕೀಯ ಸೇವೆಗಳನ್ನೂ ಶಿಬಿರದಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಸಾರ್ವಜನಿಕರು ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಸಕಾಲದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸುವುದರಿಂದ ಸೂಕ್ತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ನಲ್ಲಾ ವೆಂಕಟೇಶ್ವರ ರಾವ್, ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ ಹಾಗೂ ರವಿಗೌಡ ಮಲ್ಲದಗುಡ್ಡ ಉಪಸ್ಥಿತರಿದ್ದರು.



